ಉದಯವಾಹಿನಿ,ಶಿಡ್ಲಘಟ್ಟ :ದೇವರಾಜ ಅರಸು ಬಡವರು, ಸಾಮಾಜಿಕ ನ್ಯಾಯದ ಪರವಾಗಿ ಇದ್ದರು. ಅರಸು ಅವರು ಅಧಿಕಾರಕ್ಕೆ ಬರುವವರೆಗು ಹಿಂದುಳಿದ ವರ್ಗದವರಿಗೆ ಮೀಸಲಾತಿ ಇರಲಿಲ್ಲ. ಹಾವನೂರು ಆಯೋಗ ವರದಿ ತರಿಸಿ ಮೀಸಲಾತಿ ಜಾರಿ‌ ಮಾಡಿದರು ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು. ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಭಾನುವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯೋಜಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೦೮ ನೇ ಜನ್ಮದಿನಾಚರಣೆ ಸಮಾರಂಭದಲ್ಲಿ ಅವರು ಮಾತನಾಡಿದರು.ರಾಜ್ಯ ಕಂಡ ಶ್ರೇಷ್ಠ ಮಾನವತಾವಾದಿ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರು ಸಮ ಸಮಾಜ ನಿರ್ಮಾಣದ ರೂವಾರಿ. ಉಳುವವನಿಗೆ ಭೂಮಿ, ಹಾವನೂರು ಆಯೋಗದಂತಹ ಅವರ ಪ್ರಮುಖ ನಿರ್ಧಾರಗಳ ಪ್ರತಿಫಲ ಇಂದಿನ ಪೀಳಿಗೆಗೆ ಸಿಗುತ್ತಿದೆ ಎಂದು ಹೇಳಿದರು. ತಹಸೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ಸಮಾಜದಲ್ಲಿ ಒಂದು ಕಾಲದಲ್ಲಿ ಧಮನಿತರು ಹಿಂದುಳಿದ ವರ್ಗದವರು ಹಿಂದೂ ಹೇರು ಧ್ವನಿಯಲ್ಲಿ ಮಾತನಾಡುತ್ತಿದ್ದಾರೆ ಅಂದರೆ ಅದಕ್ಕೆ ಪ್ರಮುಖ ಕಾರಣರು ಮಾಜಿ ಮುಖ್ಯಮಂತ್ರಿ ಡಿ ದೇವರಾಜ್ ಅರಸು ಎಂದರು. ಪರಿಶಿಷ್ಟ ಜಾತಿ, ವರ್ಗ ಮತ್ತು ಹಿಂದುಳಿದ ಪಂಗಡಗಳ ಮೂಕ ಬಾಯಿಗೆ ರಾಜಕೀಯ ದನಿ ನೀಡಿದ್ದ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರು ನಿಜವಾದ ಗ್ರಾಮೀಣಾಭಿವೃದ್ಧಿಯ ಹರಿಕಾರ. ಭೂಸುಧಾರಣಾ ಕಾಯ್ದೆಯನ್ನು ಜಾರಿಗೆ ತಂದರು. ಗ್ರಾಮೀಣ ಜನತೆಯಲ್ಲಿ ಜೀವನೋಲ್ಲಾಸ ಹೆಚ್ಚಿಸಲು ಶ್ರಮಿಸಿದರು ಎಂದು ಹೇಳಿದರು.ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಲ್ಲಿನ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಎಚ್.ಡಿ ದೇವೇಗೌಡ ಮತ್ತು ಜಯಪ್ರಕಾಶ್ ನಾರಾಯಣ್ ಚಾರಿಟಬಲ್ ಟ್ರಸ್ಟ್ ವತಿಯಿಂದ ಪ್ರೋತ್ಸಾಹ ಧನ ನೀಡುವ ಮೂಲಕ ಸತ್ಕರಿಸಲಾಯಿತು.ತಾಲ್ಲೂಕು ಪಂಚಾಯಿತಿ ಇಒ ಜಿ.ಮುನಿರಾಜ, ಮಾಜಿ ಜಿ.ಪಂ.ಸದಸ್ಯ ಬಂಕ್ ಮುನಿಯಪ್ಪ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬಾರೆಡ್ಡಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ನಾರಾಯಣಸ್ವಾಮಿ, ಮುಖಂಡರಾದ ಮೇಲೂರು ಮಂಜುನಾಥ್, ತಾದೂರು ರಘು, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶಮೂರ್ತಿ, ನಗರಸಭೆ ಪೌರಾಯುಕ್ತ ಆಂಜನೇಯುಲು, ಸಿಡಿಪಿಒ ನವತಾಜ್ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!